ಮಂಗಳೂರು: ಪತ್ನಿಯನ್ನು ಕೊಲೆಗೈದು, ಅಸ್ವಾಭಾವಿಕ ಮರಣವೆಂದು ಬಿಂಬಿಸಲು ಯತ್ನಿಸಿದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ವ್ಯಕ್ತಿ ಸಂಜೀವ ನಾಯ್ಕ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ 2024ರ ಡಿ.11ರಂದು ಈ ಘಟನೆ ನಡೆದಿತ್ತು. ಸಂಜೀವ ನಾಯ್ಕ ತನ್ನ ಪತ್ನಿ ಹೃದಯಾಘಾತದಿಂದ ಬಿದ್ದಿದ್ದಾರೆ ಎಂದು ನೆರೆಮನೆಯವರಿಗೆ ತಿಳಿಸಿ, ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಹಿಳೆ ಮೃತಪಟ್ಟಿದ್ದರು. ಮೃತದೇಹದಲ್ಲಿ ಗಾಯಗಳಿದ್ದ ಹಿನ್ನೆಲೆಯಲ್ಲಿ ಸಂಶಯಾಸ್ಪದ ಮರಣವೆಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ, ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಮೃತ ಮಹಿಳೆಯ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ ವಿ.ಎನ್. ಅವರು ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಶಿಕ್ಷೆಯ ಪ್ರಮಾಣ:
ಬಿಎನ್ಎಸ್ ಕಲಂ 105 ಪಾರ್ಟ್ 2ರಡಿ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು. ಅಲ್ಲದೆ, ಕಲಂ 240ರಡಿ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯ್ಕ್ ಅವರು ವಾದ ಮಂಡಿಸಿದ್ದರು.


