ಕಡಬ: ತಾಲೂಕಿನ ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ. 27ರ ಶುಕ್ರವಾರ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಕಲ್ಕಂದೂರು ನಿವಾಸಿ ವಿಶ್ವಾಸ್ (31) ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದರು ಎನ್ನಲಾಗಿದೆ.

ನ. 27ರಂದು ಬೆಳಗ್ಗೆ ವಿಶ್ವಾಸ್ ಅವರು ಸ್ಕೂಟರ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ, ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕಾರು ಕೋಟೆ ಹೊಳೆ ಸೇತುವೆ ಬಳಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಕಾರನ್ನು ನಂದನ್ ಎಂಬಾತ ಚಲಾಯಿಸುತ್ತಿದ್ದ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ವಿಶ್ವಾಸ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ತಕ್ಷಣ ಕಡಬಕ್ಕೆ ಚಿಕಿತ್ಸೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




