ಬಂಟ್ವಾಳ: ಸರಕಾರ ಅನಗತ್ಯ ಜಾಹೀರಾತು, ಪ್ರಚಾರ, ಯೋಜನೆಗಳ ವೈಭವೀಕರಣ, ಗ್ಯಾರಂಟಿ ಸಮಾವೇಶ ಹಾಗೂ ಸಚಿವರು ಮತ್ತು ಉನ್ನತ ಅಧಿಕಾರಿಗಳ ಪ್ರವಾಸ ಸೇರಿದಂತೆ ವಿವಿಧ ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಿಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಆರೋಗ್ಯ ಸಚಿವರನ್ನು ಆಗ್ರಹಿಸಿದ್ದಾರೆ.

ಸರಕಾರ ತನ್ನ ವಾರ್ಷಿಕ ದುಂದು ವೆಚ್ಚದಲ್ಲಿ ಶೇ.1ರಷ್ಟು ಕಡಿತಗೊಳಿಸಿದರೂ ಸುಮಾರು ₹700 ಕೋಟಿ ಉಳಿತಾಯ ಮಾಡಲು ಸಾಧ್ಯವಿದೆ. ಈ ಹಣವನ್ನು ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಬಿಸಿಯೂಟ ಅಡುಗೆ ಸಿಬ್ಬಂದಿಯ ಗೌರವಧನ ಹೆಚ್ಚಿಸಲು ಬಳಸಬಹುದು. ಈ ನಿಟ್ಟಿನಲ್ಲಿ ಅವರಿಗೆ ಮಾಸಿಕ ₹20 ಸಾವಿರ ಗೌರವಧನ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ಸೇವೆ ಆರಂಭಿಸಿದಂದಿನಿಂದ ಗ್ರಾಮೀಣ ಪ್ರದೇಶಗಳಲ್ಲಿನ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮನೆಬಾಗಿಲಿನಲ್ಲೇ ಆರೋಗ್ಯ ಸೇವೆ ದೊರೆಯುವಂತೆ ಮಾಡುತ್ತಿದ್ದಾರೆ. ಗ್ರಾಮದ ಆರೋಗ್ಯ ಸೇವಕಿಯರಾಗಿ ಹಗಲಿರುಳು ಶ್ರಮಿಸುತ್ತಿರುವ ಅವರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಇಂತಹ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳಿಗೆ ಸರಕಾರ ಸ್ಪಂದಿಸಬೇಕು ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಿಸುವ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಈ ಭರವಸೆ ಈಡೇರಿಸದಿರುವುದರಿಂದ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಇಲಾಖೆ ನಡೆಯುತ್ತದೆ ಎಂಬ ಆರೋಗ್ಯ ಸಚಿವರ ಹೇಳಿಕೆ ಖಂಡನೀಯ. ಇದು ಕೇವಲ ಆಶಾ ಕಾರ್ಯಕರ್ತೆಯರಿಗೆ ಮಾಡಿದ ಅವಮಾನವಲ್ಲ, ಇಡೀ ಮಹಿಳಾ ಸಮಾಜಕ್ಕೆ ಮಾಡಿದ ಅವಮಾನವಾಗಿದೆ ಎಂದು ಪ್ರಭಾಕರ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎನ್ನುವುದಾದರೆ, ರಾಜ್ಯದಲ್ಲಿ ಸರಕಾರವೇ ಇಲ್ಲದೆ ರಾಷ್ಟ್ರಪತಿ ಆಡಳಿತವಿದ್ದರೂ ಆಡಳಿತಾಂಗ ತನ್ನ ಕೆಲಸ ನಿರ್ವಹಿಸುತ್ತದೆ. ಈ ಹಿಂದೆಯೂ ಅಂತಹ ವ್ಯವಸ್ಥೆಯಲ್ಲಿ ಆಡಳಿತ ನಡೆದಿದೆ ಎಂದು ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


