ಬೆಂಗಳೂರು: ರಾಜ್ಯದಲ್ಲಿ ಜನಿವಾರದ ವಿವಾದ ಪ್ರಕರಣ ಮಾಸುವ ಮುನ್ನವೇ ರೈಲ್ವೆ ಪರೀಕ್ಷೆ ಬರೆಯುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಪ್ರವೇಶ ಪತ್ರದಲ್ಲಿ ನೀಡಿದ ಸೂಚನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಸದ್ಯ ಈ ಪ್ರಕರಣ ತೀವ್ರ ಕಾವು ಪಡೆಯುತ್ತಿರುವುದನ್ನು ಗಮನಿಸಿದ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ ಮೂಲಕ ಎಲ್ಲ ವಿವಾದಗಳಿಗೂ ತೆರೆ ಎಳೆದಿದ್ದಾರೆ.

ಹೌದು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.

ಶಿವಮೊಗ್ಗ, ಧಾರವಾಡ ಮತ್ತು ಬೀದರ್ ಜಿಲ್ಲೆಗಳಲ್ಲಿ ಕರ್ನಾಟಕ ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಕರ್ನಾಟಕದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸದ್ಯ ಕರ್ನಾಟಕ ಹೈಕೋರ್ಟ್ನಲ್ಲಿ ಪಿಎಐಎಲ್ ಕೂಡ ಸಲ್ಲಿಕೆಯಾಗಿದೆ. ಇಂಥ ಸಂದರ್ಭದಲ್ಲೇ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯ ಪ್ರವೇಶ ಪತ್ರ ಕೂಡ ವಿವಾದಕ್ಕೆ ಗುರಿಯಾಗಿತ್ತು.

ಪ್ರಕರಣ ಹೀಗಿರುವಾಗಲೇ ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದು,ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ ಮೂಲಕ ಈ ಸಮಸ್ಯೆ ಬಗೆಹರಿದಿದೆ.

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ. ಮಂಗಳೂರಿನಲ್ಲಿ ಬೋಂದೆಲ್‌ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.



