ಮಂಗಳೂರು: ಹಿಂದೂ ಸಂಘಟನಕಾರ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 2ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಶರಣ್ ಪಂಪ್ವೆಲ್ ಕರೆ ನೀಡಿದ್ದು, ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಜೊತೆಗೆ ಶರಣ್ ಪಂಪ್ವೆಲ್ ರವರ ಅನುಯಾಯಿಗಳು ನಗರದ ವಿವಿಧ ಪ್ರದೇಶಗಳಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿ, ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿ, ಸಾರ್ವಜನಿಕ ಆಸ್ತಿ–ಪಾಸ್ತಿಗೆ ನಷ್ಟ ಉಂಟು ಮಾಡಿದ್ದಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಕಲಂ 353 (2)(ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ), 196 (1)ಬಿ (ಧರ್ಮಗಳ ನಡುವೆ ದ್ವೇಷ ಪ್ರಚೋದಿಸುವುದು), 324(2)(4)(5) (ಕಿಡಿಗೇಡಿತನ, ಸಾರ್ವಜನಿಕವಾಗಿ ನಷ್ಟ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೋಮುದ್ವೇಷದ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇರೆಗೆ ಪೊಲೀಸರು ಶರಣ್ ವಿರುದ್ಧ ಮತ್ತೆ ಮೂರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
