ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತಪಟ್ಟಿದೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಮೃತಪಟ್ಟಿದೆ.
ಈ ಬಗ್ಗೆ ರಕ್ಷಣಾ ತಂಡದ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಒಂದು ಮಗು ಮೃತಪಟ್ಟಿದೆ. ಅವಶೇಷಗಳಡಿ ಸಿಲುಕಿರುವ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಕ್ಕಳ ತಾಯಿ ಅಶ್ವಿನಿ ಉಸಿರಾಡುತ್ತಿದ್ದು, ಕೈಗಳನ್ನು ಅಲ್ಲಾಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೃತಪಟ್ಟಿರುವ ಮಗುವನ್ನು ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ತಾಯಿ ಮತ್ತು ಇನ್ನೊಂದು ಮಗುವಿನ ರಕ್ಷಣಾ ಕಾರ್ಯ ಮುಂದುವರಿದಿದೆ.
ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.



