ಮಂಗಳೂರು: ಜೆಪ್ಪಿನಮೊಗರು ಬಳಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜೂನ್ 17 ರ ರಾತ್ರಿ ನಡೆದಿದೆ.
ಮೃತಪಟ್ಟವರು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ.

ತಡರಾತ್ರಿ ಕಂಕನಾಡಿಯಲ್ಲಿ ಪಾರ್ಟಿ ಮುಗಿಸಿ , ತಲಪಾಡಿಯಲ್ಲಿ ಊಟ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.
ಓಂಶ್ರೀ ಪೂಜಾರಿ ಅವರು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಅವರು ಪಕ್ಷದ ಸಂಘಟನೆಯಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.
ಆಸ್ಪತ್ರೆಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.



